ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರನ್ನು ಬೆಂಬಲಿಸುವಂತೆ ಎಂದು ಕಾಮ್ರೇಡ್ ಬಿ. ಭಗವಾನ್ ರೆಡ್ಡಿ ಕೇಳಿಕೊಂಡಿದ್ದಾರೆ
ಬಾಗಲಕೋಟೆಯ ಪತ್ರಿಕಾ ಭವನದಲ್ಲಿನಡೆದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ.
ಕಳೆದ 10ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014ರಲ್ಲಿ ಬಿಜೆಪಿ ದನಿ ಎತ್ತಿದ ಬೆಲೆಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ. ಅಬ್ಬರದ ಪ್ರಚಾರ ಮಾಡಿದ ‘ಗುಜರಾತ್ ಮಾದರಿ’ ಅದೃಶ್ಯವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಮಾತಿರಲಿ, ಭಾರತದ ಯುವಕರು ನಿರುದ್ಯೋಗದ ಕಷ್ಟ ತಡೆಯಲಾಗದೆ, ಯುದ್ಧಪೀಡಿತ ಇಸ್ರೇಲ್, ರಷ್ಯಾಗಳಿಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾರೆ ಎಂದರು.
ಕಪ್ಪುಹಣ, ಸ್ವಿಸ್‌ಬ್ಯಾಂಕ್ ಹಣ ವಶಪಡಿಸಿಕೊಳ್ಳುವ ಬಗ್ಗೆ ಇರಲಿ, ಎಸ್‌ಬಿಐಯಲ್ಲಿರುವ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡದಂತೆ ತಡೆಯಲು ಬಿಜೆಪಿ ಸರ್ವ ಪ್ರಯತ್ನ ಮಾಡಿದೆ. ಜಾಗತಿಕ ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ. ರಾಜ್ಯದಲ್ಲಿ ಭೀಕರ ಬರ ಬಂದಿದ್ದು, ನೀರಿಗಾಗಿ ಹಾಹಾಕಾರ ಇದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕ್ಷುಲ್ಲಕ ರಾಜಕೀಯದಲ್ಲಿ ಮುಳುಗಿವೆಯೇ ಹೊರತು ಜನರ ಸಂಕಷ್ಟಗಳಿಗೆ ಕಿವಿಗೊಡುತ್ತಿಲ್ಲ ಎಂದು ಆರೋಪಿಸಿದರು.
ಆದರೆ, ಶ್ರೀಮಾನ್ ಮೋದಿಯವರು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಇಷ್ಟು ವರ್ಷ ಆಳ್ವಿಕೆ ನಡೆಸಿ ದೇಶವನ್ನು ಹಾಳುಗೆಡವಿದ ಕಾರಣ ದೇಶವನ್ನು ಅಭಿವೃದ್ಧಿಯ ಪಥಕ್ಕೆ ತರಲು ಇನ್ನೂ ಒಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಆಳ್ವಿಕೆಯಲ್ಲಿ ಕಾಂಗ್ರೆಸ್‌ನ ನಾಯಕರೂ ಇದೇ ರೀತಿ ಬ್ರಿಟಿಷರ ಮೇಲೆ ಗೂಬೆ ಕೂರಿಸುತ್ತಿದ್ದರು ಎಂದರು.
ಇನ್ನೊಂದೆಡೆ ವಿರೋಧ ಪಕ್ಷಗಳನ್ನು ಹತ್ತಿಕ್ಕಲು, ಇಡಿ, ಸಿಬಿಐ ಮೂಲಕ ಹೆದರಿಸುವುದು, ವಿರೋಧಿ ನಾಯಕರನ್ನು ಕೇಸುಗಳಲ್ಲಿ ಸಿಲುಕಿಸಿ ಜೈಲಿಗೆ ತಳ್ಳುವ ಮೂಲಕ ಜನತಂತ್ರದ ಕಗ್ಗೊಲೆ ಮಾಡುತ್ತಿದೆ ಎಂದರು.
ಇಂತಹ ಕೋಮುವಾದಿ, ಫ್ಯಾಸೀವಾದಿ, ಬಂಡವಾಳಶಾಹಿ ನೀತಿಗಳ ವಿರುದ್ಧ ಈ ಚುನಾವಣೆಯಲ್ಲಿ ಜನಪರ ಧ್ವನಿ ಮೊಳಗಬೇಕು. ಆದರೆ, ಕಾಂಗ್ರೆಸ್ ನೇತೃತ್ವದ ವಿವಿಧ ಅವಕಾಶವಾದಿ ಪ್ರಾದೇಶಿಕ ಪಕ್ಷಗಳ ಕೂಟವಾದ ಇಂಡಿಯಾ ನೈಜ ಧರ್ಮನಿರಪೇಕ್ಷ, ಪ್ರಜಾತಾಂತ್ರಿಕ ಪರ್ಯಾಯವನ್ನು ನೀಡಲು ಖಂಡಿತ ಅಸಾಧ್ಯ. ಬಿಜೆಪಿ ಬೆಳೆದು ಅಧಿಕಾರಕ್ಕೆ ಬರುವವರೆಗೆ ದೇಶದ ಬಂಡವಾಳಶಾಹಿಗಳ ಸೇವೆಗೈದಿರುವುದು ಇದೇ ಕಾಂಗ್ರೆಸ್ ಎನ್ನುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಎನ್‌ಡಿಎ ಮತ್ತು ಇಂಡಿಯಾ ಎರಡು ಮೈತ್ರಿಕೂಟಗಳು ಕೂಡ ಬಂಡವಾಳಶಾಹಿ ವರ್ಗದ ಎರಡು ಪರ್ಯಾಯಗಳಾಗಿವೆ ಎಂದರು.
ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ, ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತ ದುಡಿಯುವ ವರ್ಗದ, ಬಡ ರೈತರ ಪರ್ಯಾಯವಾಗಿ ದೇಶದ ಎಡಪಕ್ಷಗಳು ಒಂದು ಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು ಎಂದ ಅವರು, ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರ ಎಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು ಎಂದರು.
ಆದರೆ, ದುರಂತವೆಂದರೆ ಸಿಪಿಐ, ಸಿಪಿಐಎಂ ನಂತಹ ಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾ ಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ.
ರೈತರ ಹೋರಾಟಗಳಿಗೆ ಬಲ ನೀಡಲು, ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಲು, ಎನ್‌ಇಪಿ ವಿರುದ್ಧ ಹೋರಾಡಿ, ಸಾರ್ವಜನಿಕ ಶಿಕ್ಷಣ ಉಳಿಸಲು, ಯುವಜನರ, ಮಹಿಳೆಯರ ಹಿತಾಸಕ್ತಿಗಳನ್ನು ಎತ್ತಿ ಹಿಡಿಯಲು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳನ್ನು ಚುನಾಯಿಸಬೇಕು, ನಾವು ಸ್ಪರ್ಧೆ ನಡೆಸದೇ ಇರುವ ಕ್ಷೇತ್ರಗಳಲ್ಲಿ ರಾಜ್ಯದ ಮೂರು ಜನವಿರೋಧಿ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಬಿಟ್ಟು ಬೇರೆ ಪ್ರಾಮಾಣಿಕ, ಹೋರಾಟಗಾರ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ನಮ್ಮ ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡುತ್ತದೆ ಎಂದರು.
ಕಾಮ್ರೇಡ್ ಮಲ್ಲಿಕಾರ್ಜುನ ಎಚ್.ಟಿ ಅವರು ವಿದ್ಯಾರ್ಥಿ ದೆಸೆಯಿಂದ ತಮ್ಮನ್ನು ಸಂಪೂರ್ಣವಾಗಿ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ವಿದ್ಯಾರ್ಥಿ ಯೋಜನೆ ಮಹಿಳಾ ಸಂಘಟನೆಗಳ ಹೋರಾಟಗಳನ್ನು ಸತ್ಯಯುಗವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಕಾರ್ಮಿಕ ಸಂಘಟನೆಯದ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾಗಿ ಸಾಕಷ್ಟು ಕಾರ್ಮಿಕ ಹೋರಾಟಗಳನ್ನು ಯಶಸ್ವಿಗೊಳಿಸಿದ್ದಾರೆ ಎಂದ ಅವರು, ದುಡಿಯುವ ಜನಗಳ ಧ್ವನಿಯಾದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಕಾಮ್ರೇಡ್ ಮಲ್ಲಿಕಾರ್ಜುನ ಎಚ್.ಟಿ ಅವರನ್ನು ಬೆಂಬಲಿಸಿ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಾದ ಭರತ್ ಕುಮಾರ ಎಚ್.ಟಿ, ಸಿದ್ದರಾಮ್ ಇತರರು ಉಪಸ್ಥಿತರಿದ್ದರು.
