ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಇಂದು ಸಂಜೆ ಉಚ್ಚಾಟನೆ ಮಾಡಲಾಗಿದೆ.
ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ತಮ್ಮ ಮಗ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
BJP expelled KS Eshwarappa from the party for 6 years for embarrassing the party by contesting as an Independent from Shivamogga constituency: Karnataka BJP pic.twitter.com/t66oNJDe4p
— ANI (@ANI) April 22, 2024
ಮುಂದಿನ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಎದುರಾಳಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ ಸೇರಿದಂತೆ 17 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ.
