ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟವು, ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಘಟನೆ ಹಾಸನದಲ್ಲಿ ನಡೆದಿದೆ. ಪೆನ್‌ಡ್ರೈವ್ ಮುಖಾಂತರ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಿ ವಾಟ್ಸ್‌ಆಪ್ ಮೂಲಕ ವ್ಯಾಪಕವಾಗಿ ಹರಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದೆ.
ಹಾಸನ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಬದುಕು ಛಿದ್ರಗೊಂಡಿದೆ ಎಂದು ಹೇಳಿದೆ.
ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಭಾವಿ ವ್ಯಕ್ತಿ ಹಾಗೂ ಮಹಿಳೆಯರ ಖಾಸಗಿ ಲೈಂಗಿಕ ದೃಶ್ಯಗಳನ್ನು ಸಾರ್ವಜನಿಕವಾಗಿ ಹರಡುತ್ತಿರುವ ವ್ಯಕ್ತಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇಂತಹ ವಿಕ್ಷಿಪ್ತ ಮತ್ತು ವಿಕೃತ ಲೈಂಗಿಕ ಅಕ್ರಮದಿಂದಾಗಿ ಹಾಸನ ಜಿಲ್ಲೆಯ ಜನರು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅದನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಜಿಲ್ಲೆಯ ಪ್ರಭಾವಿ ವ್ಯಕ್ತಿ ಮತ್ತು ಆ ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿ ಮಹಿಳೆಯರ ಖಾಸಗಿ ಬದುಕಿಗೆ ಧಕ್ಕೆ ತಂದಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಏಪ್ರಿಲ್ 29 ರ ಸೋಮವಾರ ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆ ಬೆಂಬಲಿಸುವ ಎಲ್ಲರೂ ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಬಂದು ಸೇರಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
