ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಜೆಡಿಎಸ್ ಹೇಳಿದೆ.
ಇದನ್ನು ಓದಿದ್ದೀರಾ? ಪೆನ್‌ಡ್ರೈವ್ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ
ಅಮಾನತು ಆದೇಶ ಹೊರಡಿಸಿರುವ ಜೆಡಿಎಸ್ ಮಹಾಕಾರ್ಯದರ್ಶಿ ಕೆ.ಆರ್ ಶಿವಕುಮಾರ್, “ಮಹಿಳೆಯರ ಮೇಲೆ ದೌರ್ಜನ್ಯ ಎಸಲಾಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ತಂಡವನ್ನು ರಚಿಸಿದ್ದು, ಈ ತಂಡವು ಈಗಾಗಲೇ ಕಾರ್ಯ ಆರಂಭಿಸಿದೆ. ಈ ಕಾರಣದಿಂದಾಗಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣರವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇನ್ನು ಸೋಮವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ “ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರು ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಸನದಲ್ಲಿ ತಾವು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದ ಬಳಿಕ ಪೆನ್‌ಡ್ರೈವ್ ಅನ್ನು ಹಂಚಿದ್ದಾರೆ” ಎಂಬ ಗಂಭೀರ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿಯವರು ರಾಷ್ಟ್ರೀಯ ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆಯಿಂದ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಕಂಡು ಬಂದಿದೆ.