ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ಸರ್ಕಾರ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, “ಗೀತಾ ಶಿವರಾಜ್ ಕುಮಾರ್ ಅವರು ಗೆಲ್ಲುವುದು ಖಚಿತ” ಎಂದು ಭರವಸೆ ವ್ಯಕ್ತಪಡಿಸಿದರು.
“ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಕೆಗಾಗಲಿ ಏನೇನೂ ಪ್ರಯೋಜನವಿಲ್ಲ” ಎಂದರು.
“10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ” ಎಂದು ಹೇಳಿದರು.
ಬಡವರಿಗೆ ಶಕ್ತಿ ತುಂಬಲಾಗಿದೆ
“ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು” ಎಂದು ಮನವಿ ಮಾಡಿದರು.
