ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು, ಸಚಿವರ ಮಕ್ಕಳು, ಘಟಾನುಘಟಿ ನಾಯಕರು ಕಣದಲ್ಲಿದ್ದು, ಮತದಾರರು ಯಾರಿಗೆ ಮತಹಾಕುತ್ತಾರೆ ಎಂಬುದು ಕೌತುಕ ಮೂಡಿಸಿದೆ.
ಇಂದು ಸಂಜೆವರೆಗಷ್ಟೇ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು, ಎಲ್ಲ ಅಭ್ಯರ್ಥಿಗಳು ಅಂತಿಮ ಸುತ್ತಿನ ಪ್ರಚಾರದ ಭರಾಟೆಯಲ್ಲಿದ್ದಾರೆ. ಸಂಜೆ 6ಗಂಟೆಯ ನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು ಕ್ಷೇತ್ರಗಳನ್ನು ತೊರೆಯಬೇಕೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ರಾಜ್ಯದ ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಈ 14 ಲೋಕಸಭಾ ಕ್ಷೇತ್ರಗಳಲ್ಲಿ 21 ಮಂದಿ ಮಹಿಳೆಯರು, 206 ಮಂದಿ ಪುರುಷರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 14 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳಾಗಿ ಬಿಜೆಪಿಯವರೇ ಸ್ಪರ್ಧಿಸಿದ್ದಾರೆ.
ಈ ನಡುವೆ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ರಾಷ್ಟ್ರಾಧ್ಯಕ್ಷ ಆಕ್ರೋಶಕ್ಕೆ ಕಾರಣವಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ನೂರಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಹಗರಣವು ಚುನಾವಣೆಯಲ್ಲಿ ಬಿಜೆಪಿ ಹೊಡೆತ ನೀಡಲಿದೆ ಎಂದೂ ಹೇಳಲಾಗುತ್ತಿದೆ.