ಭಾಲ್ಕಿ ತಾಲೂಕಿನ ಬಾಜೋಳಗಾ (ಕೆ) ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಒತ್ತುವರಿ ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ
ಭಾಲ್ಕಿ- ಬಸವಕಲ್ಯಾಣ ಹಾಗೂ ಭಾಲ್ಕಿ- ಘೋಡವಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಾಜೋಳಗಾ ಗ್ರಾಮದ ಮುಖ್ಯ ರಸ್ತೆಯಲ್ಲಿ ಸುಮಾರು 30 ವರ್ಷಗಳ ಹಿಂದೆ ನಿರ್ಮಿಸಿದ ಸಾರಿಗೆ ಬಸ್ ನಿಲ್ದಾಣ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ ಪಾಳು ಬಿದ್ದಿದೆ. ಇದೀಗ ಸ್ಥಳೀಯ ಖಾಸಗಿ ವ್ಯಕ್ತಿಗಳು ಅದನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಕ್ಕಪಕ್ಕದ ಗ್ರಾಮಗಳ ನೂರಾರು ಪ್ರಯಾಣಿಕರಿಗೆ ಆಶ್ರಯ ತಾಣವಾಗಿದ್ದ ಬಸ್ ತಂಗುದಾಣ ಅಧಿಕಾರಿಗಳ ನಿರ್ಲಕ್ಷ್ಯ, ಸ್ಥಳೀಯರ ಅತಿಕ್ರಮಣದಿಂದಾಗಿ ಈಗ ನಿಲ್ದಾಣ ಇದ್ದು ಇಲ್ಲದಂತಾಗಿದೆ. ಇದರಿಂದ ಪ್ರಯಾಣಿಕರು ಸುಡು ಬಿಸಿಲಿನಲ್ಲಿ ರಸ್ತೆ ಮೇಲೆ ನಿಂತು ಬಸ್ಸಿಗಾಗಿ ಕಾಯಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.
“ಸ್ಥಳೀಯ ಖಾಸಗಿ ಜಮೀನಿನ ಮಾಲೀಕರು ಬಸ್ ನಿಲ್ದಾಣ ಕಟ್ಟಡದ ಸುತ್ತಲೂ ಮಣ್ಣು ಭರ್ತಿ ಹಾಕಿದ ಪರಿಣಾಮ ಪ್ರಯಾಣಿಕರು ನಿಲ್ದಾಣದಲ್ಲಿ ಆಶ್ರಮ ಪಡೆಯಲು ಪರದಾಡುವಂತಾಗಿದೆ. ಸರ್ಕಾರ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದಾರೆ. ಆದರೆ ಅಧಿಕಾರಿಗಳ ಉದಾಸೀನತೆಯಿಂದಾಗಿ ಬಸ್ ನಿಲ್ದಾಣ ಪಾಳು ಬಿದ್ದಿದೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳು ಸಂಪೂರ್ಣವಾಗಿ ಅತಿಕ್ರಮಣ ಮಾಡುತ್ತಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆತಂದು ತನಿಖೆಗೆ ಒಳಪಡಿಸಲಿ : ಎದ್ದೇಳು ಕರ್ನಾಟಕ ಆಗ್ರಹ
ಕೂಡಲೇ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಎಚ್ಚೆತುಕೊಂಡು ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಬಸ್ ನಿಲ್ದಾಣ ಎದುರು ರಸ್ತೆ ತಡೆ ನಡೆಸಲಾಗುವುದು ಎಂದು ಸ್ಥಳೀಯ ನಿವಾಸಿಗಳಾದ ಗಗನ ಫುಲೆ, ಫಿರೋಜ ಪಟೇಲ್, ಶಾದುಲ್,ವಿಶಾಲ ನಾಗಾರ್ಜುನ ಎಚ್ಚರಿದರು.