ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ ಪೈಕಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೂ ನಿರ್ಧಾರವಾಗಲಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯಲ್ಲಿ ಬಂಡಾಯ ಎದ್ದು ಕಾಂಗ್ರೆಸ್ ಸೇರಿ, ಮತ್ತೆ ಬಿಜೆಪಿಗೆ ಮರಳಿರುವ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಹಿಂದಿನ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದರು. ಅವರ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪವಿತ್ತು. ಅಲ್ಲದೆ, ಅವರ ವಿರುದ್ಧ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಿತ್ತು. ಅವರ ಆಡಳಿತ ಇದ್ದಾಗಲೇ ನಡೆದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತು. ಅಧಿಕಾರ ಕಳೆದುಕೊಂಡ ಬಿಜೆಪಿ, ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ನೀಡಲಿಲ್ಲ. ಆದರೆ, ಯಡಿಯೂರಪ್ಪ ಅವರ ಒತ್ತಡದ ಕಾರಣಕ್ಕಾಗಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಅವರು ಗೆದ್ದರೆ ದೆಹಲಿ ಪ್ರವೇಶಿಸುತ್ತಾರೆ. ಸೋತರೆ, ಶಾಸಕರಾಗಿ ವಿಧಾನಸಭೆಯಲ್ಲಿ ಉಳಿಯುತ್ತಾರೆ.
ಇನ್ನು, ಜಗದೀಶ್ ಶೆಟ್ಟರ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಟಿಕೆಟ್‌ನಿಂದ ವಂಚಿತರಾದ ಅವರು, ಬಿಜೆಪಿ ವಿರುದ್ಧ ಬಂಡಾಯ ಎದ್ದು, ಕಾಂಗ್ರೆಸ್ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಅದರೆ, ಅವರು ಬಿಜೆಪಿ ಮಹೇಶ್ ತೆಂಗಿನಕಾಯಿ ವಿರುದ್ಧ ಸೋಲುಂಡರು. ಬಳಿಕ, ಅವರನ್ನು ಕಾಂಗ್ರೆಸ್ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತು. ಆದರೂ, ಅವರು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದಾರೆ. ಗೆದ್ದರೆ, ಸಂಸತ್‌ಗೆ ಹೋಗುತ್ತಾರೆ. ಸೋತರೆ ನಿರುದ್ಯೋಗಿಯಾಗಿ ಉಳಿಯುತ್ತಾರೆ. ಅಲ್ಲದೆ, ಈ ಬಾರಿ ಅವರು ಸೋತರೆ, ಅವರ ರಾಜಕೀಯ ಭವಿಷ್ಯ ಇಲ್ಲಿಗೆ ಕೊನೆಯಾಗಲಿದೆ ಎಂದು ಹೇಳಲಾಗುತ್ತಿದೆ.