ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (79) ವಿಧಿವಶರಾಗಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ಸಮಯದ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಬೆಳ್ತಂಗಡಿಯ ಅವರ ನಿವಾಸಕ್ಕೆ ತರಲಾಗುತ್ತದೆ. ನಾಳೆ ಅವರ ಮನೆ ಬಳಿ ಅಂತಿಮ ದರ್ಶಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ನಾಳೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರರು, ಬೆಳ್ತಂಗಡಿಯಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದರು.
