ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇದೇ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ವರದಿಯಾಗಿತ್ತು.
ಈ ಬಗ್ಗೆ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು, ಬಂಧಿಸಿರುವುದಾಗಿ ವರದಿಯಾಗಿದೆ.
ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿ, ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದರು.
“ಸೈಟ್ ಮಾರಾಟ ಮಾಡಿಸಿಕೊಡುವ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ” ಎಂದು ಆರೋಪಿಸಿ ದೂರಿನಲ್ಲಿ ತಿಳಿಸಿದ್ದರು. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಬಳಿಕ ವಕೀಲ ದೇವರಾಜೇಗೌಡ ಸರದಿ: ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ಆರೋಪ
ಈ ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿಗಾಗಿ ದೇವರಾಜೇಗೌಡ ಮೇ 8ರಂದು ಹಾಸನದ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮೇ 15ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ. ಈ ನಡುವೆಯೇ ಇಂದು(ಶುಕ್ರವಾರ) ಸಂಜೆ ಪೊಲೀಸರು ವಶಕ್ಕೆ ಪಡೆದು, ಬಂಧಿಸಿರುವುದಾಗಿ ತಿಳಿದುಬಂದಿದೆ.
