ಬೇಸಿಗೆ ಪ್ರಯುಕ್ತ ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು 15 ದಿನಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಜೂನ್ ತಿಂಗಳಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆಯಿದ್ದು, ಜಿಲ್ಲೆಯ ಎಲ್ಲ ತಾಲೂಕಿನಲ್ಲಿ 102 ಖಾಸಗಿ ಬೋರವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ. 47 ಬೋರವೆಲ್ ಮೋಟಾರ್ ದುರಸ್ತಿ, 24 ಕಡೆ ಹೊಸ ಪೈಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬಾಡಿಗೆ ಪಡೆದ ಖಾಸಗಿ ಬೋರವೆಲ್ ಮತ್ತು ಟ್ಯಾಂಕರ್‌ಗಳ ಬಿಲ್ ಪಡೆದು ಸಂಬಂಧಪಟ್ಟವರಿಗೆ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು” ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
“ಮೋಟಾರ್ ದುರಸ್ತಿ, ಪೈಪ್‌ಲೈನ್ ಅಳವಡಿಸಿ ಬಿಲ್‌ಗಳನ್ನು ಸಹ ಆಡಳಿತಾತ್ಮಕ ಅನುಮೋದನೆ ಪಡೆದು ಹಣ ಪಾವತಿಗೆ ಕ್ರಮವಹಿಸಬೇಕು. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಬೋರವೇಲ್, ಬಾವಿಗಳಿಗೆ ಯಾವುದೇ ರೀತಿ ಕಲುಷಿತ ನೀರು ಸೇರದಂತೆ ಎಚ್ಚರವಹಿಸಿ ಸ್ವಚ್ಚತೆಯನ್ನು ಕಾಪಾಡಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಬದೋಲೆ ಮಾತನಾಡಿ, “ಜಿಲ್ಲಾ ಪಂಚಾಯತ ವತಿಯಿಂದ 114 ಕಡೆ ಬೋರವೆಲ್, ಪ್ಲಸಿಂಗ್ ಮತ್ತು ಡ್ರಿಲಿಂಗ್ ಮಾಡಲಾಗಿದ್ದು, ಕೂಡಲೇ ಆಡಳಿತಾತ್ಮಕ ಅನುಮೋದನೆ ಪಡೆದು ಬಿಲ್‌ಗಳನ್ನು ಪಾವತಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಿ ಸೂಚಿಯಾಗಿರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು
ಸಭೆಯಲ್ಲಿ ಸಹಾಯಕ ಆಯುಕ್ತ ಲವೀಶ ಓರ್ಡಿಯಾ, ಎಲ್ಲ ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.