ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಾರ್ವಜನಿಕ ಶೌಚಾಲಯ ಗೋಡೆ ಕುಸಿದ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಪಟ್ಟಣದ 5ನೇ ವಾರ್ಡ್‌ನಲ್ಲಿರುವ ಸಾರ್ವಜನಿಕ ಶೌಚಾಲಯದ ಗೋಡೆ ಸಾಕಷ್ಟು ನೆಂದಿತ್ತು. ಶುಕ್ರವಾರ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಏಕಾಏಕಿ ಶೌಚಾಲಯದ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಬಾನು ಬೇಗಂ (40) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಉಮಾಬಾಯಿ ಹಾಗೂ ಮಹಾದೇವಿ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಮಾಬಾಯಿ ಬಪ್ಪರಗಿ (35) ಎಂಬುವರು ಸಹ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಚಿಂತಾಜನಕ ಸ್ಥಿತಿಯಲ್ಲಿರುವ ಮಹಾದೇವಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಆಸ್ಪತ್ರೆಗೆ ರವಾನಿಸಲಾಗಿದೆ.