ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಖಾಸಗಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮೃತರು ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60), ದುರುಗಮ್ಮ ಹನುಮಪ್ಪ (65) ಎಂದು ಗುರುತಿಸಲಾಗಿದೆ.
ಕರಮುಡಿ ಗ್ರಾಮದ ಶಿವಪ್ಪ ಹೊಸಮನಿ ಎಂಬುವರು ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ 30ಕ್ಕೂ ಹೆಚ್ಚು ಜನ ಸಂಬಂಧಿಕರನ್ನು ಟ್ರ್ಯಾಕ್ಟರ್‌ನಲ್ಲಿ ಕರೆದುಕೊಂಡು ಹೋಗಿದ್ದರು. ಹರಕೆ ತೀರಿಸಿ ಶುಕ್ರವಾರ ರಾತ್ರಿ ವಾಪಾಸ್ ಊರಿಗೆ ಬರುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಜರುಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 18 ಜನರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ದುರುಗಮ್ಮ (65) ಎಂಬುವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸಾರ್ವಜನಿಕ ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು
ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲಿಸಿದರು.