ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮ್ಮೆ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮ್ಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ತಮಿಳುನಾಡಿಗೆ 2.5 ಟಿಎಂಸಿ ನೀಡು ಹರಿಸಲು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸೂಚಿಸಿದ ಹಿನ್ನೆಲೆಯಲ್ಲಿ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈಗ ಮತ್ತೊಮ್ಮೆ ಕಾವೇರಿಯ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ” ಎಂದು ಟೀಕಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರು; ಬಂಡಲ್ ಬಡಾಯಿ
“ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಂಡಲ್ ಬಡಾಯಿ ಕೊಚ್ಚಿಕೊಂಡು ತಿರುಗಾಡುತ್ತಿರುವ ಡಿ ಕೆ ಶಿವಕುಮಾರ್ ಅವರೇ, ಬೆಂಗಳೂರಿನ ಪರಿಸ್ಥಿತಿ ನೋಡಿ. ನಾಡಪ್ರಭು ಕೆಂಪೇಗೌಡರು ಕಟ್ಟಿದ ನಮ್ಮ ಹೆಮ್ಮೆಯ ಬೆಂಗಳೂರು ನಗರ ಈಗ ಮೇಲ್ವಿಚಾರಣೆ, ನಿರ್ವಹಣೆ, ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಯಲ್ಲದೆ ಸೊರಗುತ್ತಿದೆ” ಎಂದು ಇದೇ ಮತ್ತೊಂದು ಪೋಸ್ಟ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
“ನಿಮಗೆ ರಾಜ್ಯದ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯವಾಗಿದ್ದರೆ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಕೆಲಸ ಮಾಡಿ” ಎಂದು ಲೇವಡಿ ಮಾಡಿದ್ದಾರೆ.
