ಬೀದಿನಾಯಿ ದಾಳಿಗೆ ಒಳಗಾಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದೆ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿತ್ತು. ಈ ವೇಳೆ ನಾಲ್ಕು ವರ್ಷದ ಲಾವಣ್ಯ ನಾಯಿ ಕಡಿತಕ್ಕೆ ಒಳಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಳು, ಬಳಿಕ ಬಿಡುಗಡೆಯಾಗಿ ಮನೆಗೆ ಬಂದಿದ್ದಳು. ಆದರೆ, ಏಕಾಏಕಿ ಮೃತಪಟ್ಟಿದ್ದಾಳೆ.
ನಾಯಿ ಕಡಿತಕ್ಕೆ ಒಳಗಾಗಿದ್ದ ಎಲ್ಲ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ, ಲಾವಣ್ಯ ಸಾವಿನಿಂದ ಉಳಿದ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ.
ಬೀದಿ ನಾಯಿಗಳ ಆವಾಂತರ ನಡೆದರೂ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಘಟನೆಯಿಂದ ಗಾಯಗೊಂಡ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸದೇ ಸಗಮಕುಂಟಾ ಪಂಚಾಯಿತಿ ನಿರ್ಲಕ್ಷಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಮೃತ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.