ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ದಾವಣಗೆರೆ, ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಖಚಿತವಾಗಿ ಗೆಲ್ಲುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು, “ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಣ ಸಂಸ್ಥೆಯೊಂದರ ಕಾರ್ಯದರ್ಶಿಯಾಗಿ ಶಿಕ್ಷಕರ ಸಮಸ್ಯೆಯನ್ನು ಮೂಲದಿಂದ ಬಲ್ಲವರಾಗಿದ್ದಾರೆ. ಸಮಸ್ಯೆಯ ಮೂಲ ಮತ್ತು ಪರಿಹಾರ ಎರಡು ಅವರಿಗೆ ತಿಳಿದಿದೆ. ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ” ಎಂದರು.
“ಚುನಾವಣೆಯಲ್ಲಿ ಶಿಕ್ಷಕರು ಅಭ್ಯರ್ಥಿಗಳ ಮೌಲ್ಯಮಾಪನ ಮಾಡಲಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪರವಾದ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವುಗೆ ಶ್ರೀರಕ್ಷೆಯಾಗಲಿದೆ. ಬಿಜೆಪಿ ಮತದಾರರು ಈ ಬಾರಿ ಕಾಂಗ್ರೆಸ್ ಹೆಚ್ಚು ಮತ ನೀಡಲಿದ್ದಾರೆ” ಎಂದರು.
“ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಕ ಸ್ನೇಹಿ ಆಡಳಿತವನ್ನು ನೀಡುತ್ತಾ ಬಂದಿದೆ. 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಎನ್.ಪಿ.ಎಸ್ ಬದಲು ಒಪಿಎಸ್ ನೀಡಲು ಈಗಾಗಲೇ ಸಮಿತಿ ರಚಿಸಿದ್ದು, ಸಮಿತಿಯ ವರದಿಯಿಂದ ಶಿಕ್ಷಕರಿಗೂ ಅನುಕೂಲವಾಗಲಿದೆ. ಅಲ್ಲದೆ,ಪೂರಕ ಬೋಧನೆಗೆ ಸಂಬಂಧಿಸಿದಂತೆ ಹೊರಡಿಸಿದ್ದ ರಜೆ ಕಡಿತ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಪಡಿಸಿ, ಮೇ.29 ರಿಂದಲೇ ಶಾಲೆಗಳ ಆರಂಭಕ್ಕೆ ಆದೇಶ ನೀಡಲಾಗಿದೆ.ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಶ್ರೀನಿವಾಸ್ ಅವರಿಗೆ ಟಿಕೇಟ್ ನೀಡಿದ್ದಾರೆ.ಅವರನ್ನು ಗೆಲ್ಲಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು.
“ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಒಳ್ಳೆಯ ವ್ಯಕ್ತಿಯಾಗಿದ್ದು, ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಇವರ ಎರಡು ವಿದ್ಯಾಸಂಸ್ಥೆಗಳಲ್ಲಿ ಸುಮಾರು 15ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತಿದ್ದು, 1500ಕ್ಕೂ ಹೆಚ್ಚು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.ಈ ಹಿಂದೆ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರಣ ಬಿಜೆಪಿಯಲ್ಲಿನ ಕೆಲವರು ಇವರಿಗೆ ಮತ ನೀಡಲಿದ್ದಾರೆ. ಹಾಗಾಗಿ ಶ್ರೀನಿವಾಸ ಗೆಲುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ತಿಳಿಸಿದರು.
“ಹಿಂದಿನ ಬಿ.ಎಸ್.ವೈ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿಲ್ಲ. ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗ್ರೆಸ್ ಮಾರ್ಕ್ಸ್ ನೀಡುವ ಮಟ್ಟಕ್ಕೆ ಶಾಲಾ ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ.ಆದರೆ ನಮ್ಮ ಸರಕಾರ ಕಟ್ಟಡಗಳಿಗಿಂತ, ಬೌಧ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಲಿದೆ.ವರ್ಷಕ್ಕೆ 500ರಂತೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೆ.ಪಿ.ಎಸ್.ಶಾಲೆಗಳನ್ನು ತೆರೆಯಲು ಮುಂದಾಗಿದೆ ಎಂದು ಸರಕಾರದ ಮುನ್ನೋಟವನ್ನು ಪುಟ್ಟಣ್ಣ ವಿವರಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, “ಕಳೆದ ಬಾರಿಯ ಆಗ್ನೇಯ ಪದವಿಧರ ರ ಕ್ಷೇತ್ರದ ಚುನಾವಣೆಯಲ್ಲಿ ಕೂದಲೆಳೆಯ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ಮತದಾರರು ಹೆಚ್ಚಿನ ರೀತಿಯ ಒಲವು ತೋರಲಿದ್ದಾರೆ ಎಂಬ ವಿಶ್ವಾಸವಿದೆ.ಸ್ವತಃ ಶಿಕ್ಷಕನಾಗಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಕೆ.ಎ.ಎಸ್.ಅಧಿಕಾರಿಯಾಗಿ ನನ್ನ ಅನುಭವವನ್ನು ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಬಳಕೆ ಮಾಡಿಕೊಳ್ಳಲಿದ್ದೇನೆ” ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ.ಬ್ರಿಜೇಶ್,ಹುಚ್ಚಾಚಾರ್, ರಾಜೇಶ್ ದೊಡ್ಡಮನಿ ಮತ್ತಿತರರು ಉಪಸ್ಥಿತರಿದ್ದರು.