ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್ಐಟಿ ಅಧಿಕಾರಿಗಳು ಮತ್ತೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡುವ ಸಾಧ್ಯತೆ ಇದೆ.
ಪ್ರಜ್ವಲ್ ವಿಚಾರಣೆಗೆ ಸರಿಯಾಗಿ ಸ್ಪಂದನೆ ನೀಡಿಲ್ಲ ಹಾಗೂ ಘಟನೆ ನಡೆದ ಸ್ಥಳಕ್ಕೆ ಆರೋಪಿ ಪ್ರಜ್ವಲ್ನನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಕೂಡ ಸಮಯಾವಕಾಶಕ್ಕಾಗಿ ಎಸ್ಐಟಿ ತಂಡ ಇನ್ನಷ್ಟು ವಿಚಾರಣೆಗೆ ಮತ್ತೆ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡುವ ಸಾಧ್ಯತೆ ಇದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ, ಸರ್ಕಾರ ಎಸ್ಐಟಿ ರಚನೆ ಮಾಡಿ, ತನಿಖೆಗೆ ಆದೇಶ ಮಾಡಿತ್ತು. ಇನ್ನು ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದ ಬಳಿಕ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು. ಈತನ ವಿರುದ್ಧ ಬ್ಲೂ ಕಾರ್ನರ್ ನೋಟಿಸ್, ಬಂಧನ ವಾರಂಟ್ ಕೂಡ ಹೊರಡಿಸಲಾಗಿತ್ತು. ಕೊನೆಗೆ 35 ದಿನಗಳ ಬಳಿಕ ವಿದೇಶದಿಂದ ಆರೋಪಿ ಆಗಮಿಸುತ್ತಿದ್ದಂತೆ ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್ಐಟಿ ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್ಗೆ ಹಾಜರುಪಡಿಸಿ ಜೂನ್ 6ರವರೆಗೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.
ನ್ಯಾಯಾಲಯದ ಅನುಮತಿ ಪಡೆದ ಎಸ್ಐಟಿ ಅಧಿಕಾರಿಗಳು ಆರೋಪಿ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಹಲವೆಡೆ ಭಾರೀ ಮಳೆ; ಹಾಸನದಲ್ಲಿ ಸಿಡಿಲು ಬಡಿದು ಮೂವರು ಸಾವು
ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿದೆ. ತಪಾಸಣೆ ಮುಗಿದ ಬಳಿಕ ಸಂಜೆ ಮತ್ತೆ ಸಿಐಡಿ ಕಚೇರಿಗೆ ಕರೆ ತಂದು ಎಸ್ಐಟಿ ವಿಚಾರಣೆಗೆ ಒಳಪಡಿಸಿದೆ. ಇನ್ನೊಂದು ವಾರದಲ್ಲಿ ವರದಿ ಎಸ್ಐಟಿ ಕೈ ಸೇರಲಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.
ಒಂದು ಕಡೆ ಪ್ರಜ್ವಲ್ ವಿರುದ್ಧ ಸಾಲುಸಾಲು ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದ್ದು, ಜೈಲು ಪಾಲಾಗಿದ್ದಾರೆ. ಇನ್ನೊಂದೆಡೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದಾರೆ.