ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು, ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, “ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಸಿಎಂ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು. ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದರಾಬಾದ್‌ಗೆ ಹೋಗಿ ನಂತರ ದೆಹಲಿಗೆ ತಲುಪಿದೆ” ಎಂದು ಆರೋಪಿಸಿದರು.
“ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆ” ಎಂದು ದೂರಿದರು.
“ಲೂಟಿಕೋರರ ಪಾರ್ಟಿ ಕಾಂಗ್ರೆಸ್ ನುಡಿದಂತೆ ನಡೆಯುತ್ತೇವೆ ಎಂದು ಹಣ ಕೊಳ್ಳೆ ಹೊಡೆದಿದ್ದಾರೆ. ಯಾವುದೇ ಪ್ರಕರಣದಲ್ಲಿ ಒಂದೇ ಬಾರಿಗೆ ಎರಡು ಸಂಸ್ಥೆಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ಆದರೆ ಸಿಬಿಐ ಮಾಡಬೇಕಾದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಈ ಎಟಿಎಂ ಸರ್ಕಾರ ಟಕಾಟಕ್ ಎಂದು ಹಣ ವರ್ಗಾವಣೆ ಮಾಡಿಕೊಂಡಿದೆ. ಇನ್ನೂ ಯಾವ ನಿಗಮಗಳಲ್ಲಿ ಎಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ? ಎಷ್ಟು ಬೇನಾಮಿ ಖಾತೆಗಳಿಗೆ ಹಣ ಹೋಗಿದೆ ಎಂದು ಪತ್ತೆಯಾಗಬೇಕು” ಎಂದು ಒತ್ತಾಯಿಸಿದರು.
“ರಾಜ್ಯಪಾಲರಿಗೆ ಈ ಕುರಿತು ವಿವರ ನೀಡಿದ್ದೇವೆ. ಬಿಜೆಪಿ ನಾಲ್ಕು ಹಂತಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಕೂಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ” ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ @INCKarnataka ಸರ್ಕಾರದ ಆರೋಪಿತ ಸಚಿವ ಶ್ರೀ ಬಿ. ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಂದು ಆಗ್ರಹಿಸಿ ಇಂದು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ, ಗೌರವಾನ್ವಿತ ರಾಜ್ಯಪಾಲರಿಗೆ ದೂರು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra… pic.twitter.com/UMxADnLDEw
— R. Ashoka (ಮೋದಿ ಅವರ ಕುಟುಂಬ) (@RAshokaBJP) June 6, 2024

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.