ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಯೂಟ್ಯೂಬರ್‌ಗಳು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ. ನಾಲ್ವರು ಯುವಕರು ಯೂಟ್ಯೂಬ್‌ನಲ್ಲಿ ರೌಂಡ್ 2 ವರ್ಲ್ಡ್ ಚಾನೆಲ್‌ನಲ್ಲಿ ಹಾಸ್ಯ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದರು.
ಯೂಟ್ಯೂಬರ್‌ಗಳು ಹುಟ್ಟುಹಬ್ಬದ ಪಾರ್ಟಿಯನ್ನು ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅವರ ಕಾರು ಎದುರು ದಿಕ್ಕಿನಿಂದ ಬರುತ್ತಿದ್ದ ಬೊಲೆರೊ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿದ್ದೀರಾ? ಪೋರ್ಷೆ ಕಾರು ಅಪಘಾತ ಪ್ರಕರಣ | ರಕ್ತದ ಮಾದರಿ, ಸಾಕ್ಷ್ಯ ನಾಶ ಆರೋಪ; ಇಬ್ಬರು ವೈದ್ಯರ ಬಂಧನ
ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನರು ಯುವಕರನ್ನು ಸಿಎಚ್‌ಸಿ ಗಜರೌಲಾ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಚಿಕಿತ್ಸೆಯ ಆರಂಭಿಕ ಹಂತದಲ್ಲೇ ನಾಲ್ವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಮ್ರೋಹಾ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಅಪಘಾತದ ಸ್ಥಳವನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.