ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಿಡುಗಡೆಯಾಗುವ ಮುನ್ನವೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ವಾರಂಟ್ ಹೊರಡಿಸಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಸಮಾಧಾನಗೊಂಡಿದ್ದು, “ಯಡಿಯೂರಪ್ಪರನ್ನು ಕೆಣಕಲು ಹೋದರೆ ಕಾಂಗ್ರೆಸ್ ನಿರ್ನಾಮವಾಗುತ್ತದೆ” ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, “ಯಡಿಯೂರಪ್ಪನವರ ಪ್ರಕರಣಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ, ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ” ಎಂದು ಪ್ರಶ್ನಿಸಿದೆ.
“ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ. ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್ ಗಾಂಧಿಯವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ” ಎಂದಿದೆ.
“ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಬಿಜೆಪಿ ಹೇಳಿದೆ.
“ಈ ಹಿಂದೆ ಸ್ವತಃ ಗೃಹ ಸಚಿವ ಜಿ ಪರಮೇಶ್ವರ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ” ಎಂದಿದೆ.
“ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ, ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ” ಎಂದು ಪ್ರಶ್ನಿಸಿದೆ.
17 ವರ್ಷದ ಸಂತ್ರಸ್ತೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ನ್ಯಾಯ ಕೊಡಿಸಿ ಎಂದು ಕೋರಿ ತನ್ನ ತಾಯಿಯೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ರೇಪ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕರೆದುಕೊಂಡು ಆಕೆಯ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.
ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿ, “ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ” ಎಂದು ಪೊಲೀಸರಿಗೆ ತಿಳಿಸಿದ್ದರು.
ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪ ಅವರು ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಬಾಲಕಿಯ ತಾಯಿ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ
ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
“ಪ್ರಕರಣ ದಾಖಲಾಗಿ ಹಲವು ತಿಂಗಳುಗಳಾದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ” ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
“ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಕೂಡಲೇ ಬಂಧಿಸುವಂತೆ ನಿರ್ದೇಶಿಸಬೇಕೆಂದು” ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ವಿವರಿಸಿದ್ದಾರೆ.
ವಿಚಾರಣೆ ನಡೆಸಿರುವ ನ್ಯಾಯಾಲಯವು ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರಂಟ್ ಹೊರಡಿಸಿದೆ.