ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಪೋಕ್ಸೊ ಪ್ರಕರಣದಲ್ಲಿ ತಮ್ಮ ವಿರುದ್ಧ ಬಂಧನ ವಾರೆಂಟ್ ಹೊರಡಿಸಲು ಸಿಐಡಿ ಪೊಲೀಸರು ವಿಚಾರಣಾಧೀನ ನ್ಯಾಯಾಲಯದಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ವಿಚಾರ ಹೊರಬೀಳುತ್ತಲೇ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು, “ಮುಂದಿನ ವಿಚಾರಣೆಯವರೆಗೆ ಬಿಎಸ್ವೈ ಅವರನ್ನು ಪೊಲೀಸರು ಬಂಧನ ಮಾಡಬಾರದು. ಜೂನ್ 17ರಂದು ಬಿಎಸ್ವೈ ವಿಚಾರಣೆಗೆ ಹಾಜರಾಗಬೇಕು” ಆದೇಶಿಸಿ ವಿಚಾರಣೆ ಮುಂದೂಡಿತು. ಅಲ್ಲದೇ, ಪ್ರಕರಣದ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿ ಮಾಡಿತು.
ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಬೆಂಗಳೂರು ನಗರದ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಗುರುವಾರ ಪುರಸ್ಕರಿಸಿತ್ತು. ಇದರಿಂದ ಬಂಧನ ಭೀತಿ ಎದುರಿಸುತ್ತಿದ್ದರು. ಸದ್ಯ ಹೈಕೋರ್ಟ್ ಆದೆಶದಿಂದ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರೆ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ರಾಜ್ಯ ಸರ್ಕಾರ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.
ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿ, “ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ” ಎಂದು ಪೊಲೀಸರಿಗೆ ತಿಳಿಸಿದ್ದರು.
ಇದನ್ನು ಓದಿದ್ದೀರಾ? ಗುಜರಾತ್ | ಸಿಎಂ ವಸತಿ ಯೋಜನೆಯಡಿ ಮುಸ್ಲಿಂ ಮಹಿಳೆಗೆ ಫ್ಲ್ಯಾಟ್ ಮಂಜೂರು; ಹಿಂದುಗಳಿಂದ ವಿರೋಧ
ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪ ಅವರು ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಬಾಲಕಿಯ ತಾಯಿ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
