ಮಾಜಿ ಮುಖ್ಯಮಂತ್ರಿಗಳಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಇಬ್ಬರು ನಾಯಕರೂ ರಾಜೀನಾಮೆ ಸಲ್ಲಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.
ಹಾವೇರಿ ಲೋಕಸಭೆ ಕ್ಷೇತ್ರದಿಂದ ಈಗ ಸಂಸದರಾಗಿ ಆಯ್ಕೆಯಾಗಿದ್ದು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
