ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದಲ್ಲಿ ಭಾನುವಾರ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರದ ಚೆಕ್ ವಿತರಣೆ, ಸದಸ್ಯರ ಮರಣ ಮತ್ತು ರಾಸು ಮರಣ ಪರಿಹಾರ ಚೆಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಾನೂನಿನ ಮುಂದೆ ಎಲ್ಲರೂ ಸಮಾನರು. ತಪ್ಪು ಮಾಡಿ ಎಂದು ನಾವು ಮಕ್ಕಳಿಗೆ ಹೇಳುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಬೇಕು. ಅದೇ ರೀತಿ, ತಪ್ಪು ಮಾಡಿದ ಯಾರೇ ಆದರೂ ಕಾನೂನಿನ ಎದುರು ತಲೆಬಾಗಬೇಕು’ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹಾಸನದ ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಸಂತ್ರಸ್ತ ಯುವಕ ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದ. ಅಲ್ಲದೇ, ಹಾಸನ ಎಸ್ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದ. ಈ ದೂರನ್ನು ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದರು.
ನಿನ್ನೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ, ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
