ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಿಐಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜತೆಗೆ, ಪ್ರಜ್ವಲ್‌ಗೆ ಸಂಬಂಧಿಸಿದ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಜನರಿಗೆ ಹಂಚಿಕೆ ಮಾಡಿದ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಪ್ರೀತಂ ಗೌಡ ಸಹಚರರಾದ ಶರತ್ ಹಾಗೂ ಕಿರಣ್ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಪ್ರೀತಂ ಗೌಡ ಅವರ ವಿರುದ್ಧ ದಾಖಲಾದ ಎಫ್ಐಆರ್ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಎಫ್ಐಆರ್ ದಾಖಲಾದ ಹಿನ್ನಲೆ ಪ್ರೀತಂ ಗೌಡ ಯಾವ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಎಸ್‌ಐಟಿ ಕಸ್ಟಡಿಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಇನ್ಮುಂದೆ 1 ಲೀ. ಜೊತೆಗೆ 50 ಎಂಎಲ್ ಹೆಚ್ಚುವರಿ ಹಾಲು; ₹2 ಏರಿಕೆ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಪ್ರಜ್ವಲ್ ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.