ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ನೇತ್ರಾವತಿ ನದಿಗೆ ಸೇರುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿಯ ಹರಿವು ಹೆಚ್ಚಿದ್ದು ನೀರು ಇನ್ನಷ್ಟು ಏರುವ ಸಾಧ್ಯತೆಯಿದೆ. ಪ್ರಸ್ತುತ ನದಿಯಲ್ಲಿ ಪ್ರವಾಹದ ಸ್ಥಿತಿ ಇಲ್ಲ. ಆದರೆ, ಹರಿವು ಹೆಚ್ಚಿದೆ. ತಗ್ಗು ಪ್ರದೇಶದ ಕೆಲವು ತೋಟಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ 5.8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.
ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜನ ಎಚ್ಚರಿಕೆಯಿಂದ ಇರಬೇಕು. ನದಿ ತೀರದ ಜನರು ಹೊಳೆಯಲ್ಲಿ ಇಳಿಯದಂತೆ ಸೂಚನೆ ನೀಡಿದೆ. ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿ, ಪ್ರೌಢಶಾಲೆಗಳಿಗೆ ರಜೆ ನೀಡಿದೆ.
ಜೋರು ಮಳೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಅಣೆಕಟ್ಟು ಸಂಪೂರ್ಣವಾಗಿ ಮುಳುಗಿದ್ದು, ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗುತ್ತಿದೆ. ಕುಮಾರಧಾರ ನದಿ ತೀರದಲ್ಲಿ ಭದ್ರತಾ ಸಿಬ್ಬಂದಿ, ಹೋಮ್ಗಾರ್ಡ್ಸ್ಗಳನ್ನು ನಿಯೋಜಿಸಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಭಾರೀ ಮಳೆಗೆ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ಒಳ ಹರಿವು ಹೆಚ್ಚಾದರೇ ಹನಗೋಡು ಬಳಿ ಇರುವ ಅಣೆಕಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಇದರಿಂದ ನದಿ ನೀರು ಅಕ್ಕಪಕ್ಕದ ಜಮೀನುಗಳಿಗೆ ನುಗ್ಗಲಿದೆ. ಕೊಡಗಿನಲ್ಲಿ ಜೋರು ಮಳೆಯಾಗುತ್ತಿರುವ ಕಾರಣ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಭಾಗಮಂಡಲ – ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು
ಸಿದ್ದಾಪುರ ತಾಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ 400ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ, ಇದನ್ನ ಜಿಲ್ಲಾಡಳಿತ ನಿರ್ಲಕ್ಷಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಗುರುವಾರವೂ ಆಗುತ್ತಿದೆ. ಮಳೆಗೆ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಜಲಾವೃತಗೊಂಡಿದೆ. ಉಪ್ಪಿನಂಗಡಿ ಬಳಿ ನೇತ್ರಾವತಿ ನದಿ ನೀರಿನ ಮಟ್ಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.