ಮಾಜಿ ಕ್ರಿಕೆಟಿಗ ಜಿ ಆರ್ ವಿಶ್ವನಾಥ್, ಗೋಕುಲ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಲಿಂಗರಾಜ ಗಾಂಧಿ, ಶಿಕ್ಷಣ ಮತ್ತು ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿದ ಇಬ್ಬರಿಗೆ ಈ ಬಾರಿ ಡಾಕ್ಟರೇಟ್ ನೀಡಲಾಗಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂನ್ 29ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ? 70ರ ದಶಕದ ಕ್ರಿಕೆಟ್ ಪ್ರಿಯರ ಆರಾಧ್ಯ ದೈವ ಜಿಆರ್ ವಿಶ್ವನಾಥ್‌ಗೆ 75ರ ಸಂಭ್ರಮ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಟಿ.ಜಿ. ಸೀತಾರಾಮ್ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಒಟ್ಟು 1.40 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 6,424 ಸ್ನಾತಕೋತ್ತರ ವಿದ್ಯಾರ್ಥಿಗಳು, 29,484 ಪದವಿ ವಿದ್ಯಾರ್ಥಿಗಳಿಗೆ ಮೂರನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ನಾಲ್ವರಿಗೆ ಪಿಎಚ್.ಡಿ ಪ್ರಧಾನ ಮಾಡಲಾಗುವುದು. ವಿವಿಧ ವಿಭಾಗಗಳ ಒಟ್ಟು 63 ವಿದ್ಯಾರ್ಥಿಗಳು ಚಿನ್ನದ ಪದಕ, ನಗದು ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ ಎಂದರು.
ಕುಲಸಚಿವ ಟಿ.ಜವರೇಗೌಡ, ಪರಿಕ್ಷಾಂಗ ಕುಲಸಚಿವ ಸಿ.ಎಸ್. ಆನಂದ ಕುಮಾರ್, ಹಣಕಾಸು ಅಧಿಕಾರಿ ಎಂ.ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.
