ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಅದಕ್ಕೆ ಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಆದರೆ ಅವರ ಕುಟುಂಬದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೆಲ್ಲದಕ್ಕೂ ಅವರು ತೆರೆ ಎಳೆದಿದ್ದಾರೆ.
ಈ ಕುರಿತಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿ ಕೆ ಶಿವಕುಮಾರ್, ‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ನಿನ್ನೆಯಷ್ಟೆ ಹೆಚ್ಚುವರಿ ಡಿಸಿಎಂ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದ ಡಿ ಕೆ ಶಿವಕುಮಾರ್, ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ತಿಳಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ
”ಮಾಧ್ಯಮಗಳು ಪ್ರಚಾರ ಮಾಡುತ್ತವೆಯೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ” ಎಂದು ಹೇಳಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ”ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ” ಎಂದು ತಿಳಿಸಿದ್ದರು.
