ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಬಹುಕೋಟಿ ಅಕ್ರಮ ಪ್ರಕರಣದಲ್ಲಿ ನಿಗಮದ ಹಣವನ್ನು ಸುಮಾರು 600ಕ್ಕೂ ಹೆಚ್ಚು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ರೂ. ನಗದನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಸುಮಾರು 193 ಬ್ಯಾಂಕ್‌ಗಳಿಂದ 10 ಕೋಟಿ ರೂ. ಹಣವನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಈ ಹಣ ಬಾರ್ ಮತ್ತು ಚಿನ್ನದ ಅಂಗಡಿಗಳ ಖಾತೆಗಳಿಗೆ ವರ್ಗಾವಣೆ ಆಗಿತ್ತು ಎಂದು ತಿಳಿದುಬಂದಿದೆ. ಇದೀಗ ವಶಕ್ಕೆ ಪಡೆದ 10 ಕೋಟಿ ರೂ. ಸೇರಿ ಒಟ್ಟು 28 ಕೋಟಿ ರೂ. ಹಣವನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡಿದೆ.
ಇನ್ನು, ಅಕ್ರಮದ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಪೂರ್ತಿ ಹಣವನ್ನು ಮರಳಿ ಪಡೆಯಬೇಕು. ಮಾಜಿ ಸಚಿವ ಬಿ ನಾಗೇಂದ್ರ ಅವರನ್ನ ಬಂಧಿಸಬೇಕು. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂಬ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.