ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ತನ್ನ ಕಳೆದ ವರ್ಷದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಜುಲೈ 10ರಂದು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಕಳೆದ ವರ್ಷ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಮನವಿಗಳನ್ನು ಪರಿಶೀಲಿಸಲಿದೆ. ಮುಖ್ಯ ನ್ಯಾಯಮೂರ್ತಿ ಮಾತ್ರವಲ್ಲದೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಹಿಮಾ ಕೊಹ್ಲಿ, ಬಿವಿ ನಾಗರತ್ನ ಮತ್ತು ಪಿಎಸ್ ನರಸಿಂಹ ಪೀಠದಲ್ಲಿರಲಿದ್ದಾರೆ.
ಇದನ್ನು ಓದಿದ್ದೀರಾ? ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡಲು ‘ನಮಗೆ’ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್
ಕಳೆದ ವರ್ಷ ಅಕ್ಟೋಬರ್ 17ರಂದು ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಾನೂನು ರೂಪಿಸುವುದು ಸಂಸತ್‌ಗೆ ಬಿಟ್ಟ ಸಂಗತಿ ಎಂದು ಹೇಳಿದೆ.
ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಸಲಾದ 21 ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠವು ತೀರ್ಪು ಪ್ರಕಟಿಸಿತ್ತು. ಪೀಠವು 3:2 ಬಹುಮತದ ತೀರ್ಪು ನೀಡಿತ್ತು.
ಇನ್ನು 2018ರಲ್ಲಿ, ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸಲಿಂಗಪ್ರೇಮವನ್ನು ಅಪರಾಧವೆಂದು ಪರಿಗಣಿಸುವ ಐಪಿಸಿಯ ಸೆಕ್ಷನ್ 377ರ ಭಾಗವನ್ನು ರದ್ದುಗೊಳಿಸಿದೆ. ಈ ಮೂಲಕ ಸಲಿಂಗಕಾಮವು ಅಪರಾಧವಲ್ಲ ಎಂದು ಹೇಳಿದೆ.