ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿವೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿರುವ ಹಲವು ಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಕರಂಬಳ್ಳಿ ವೆಂಕಟರಮಣ ಲೇಔಟ್ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.
ಧಾರಾಕಾರ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ತಗ್ಗು ಪ್ರದೇಶದಲ್ಲಿ ಅಂಗಡಿ ಸೇರಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಕೃತಕ ನೆರೆ ಸೃಷ್ಟಿಯಾಗಿರುವುದರಿಂದ ಹಲವು ಹಿರಿಯ ವ್ಯಕ್ತಿಗಳು, ಮನೆಯಲ್ಲೇ ಬಾಕಿಯಾಗಿದ್ದರು. ಎಲ್ಲರನ್ನೂ ಪೊಲೀಸ್ ಹಾಗೂ ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ಮಾಡಿ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.
ಭಾರೀ ಮಳೆಯಿಂದ ನಗರದಲ್ಲಿ ತೋಡು ತುಂಬಿ ಹರಿಯುತ್ತಿದ್ದು, ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ರಸ್ತೆ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.
ಈ ದಿನ.ಕಾಮ್ ಜೊತೆ ಮಾತನಾಡಿದ ಸ್ಥಳೀಯ ನಿವಾಸಿ ಉದಯಕುಮಾರ್, “ಪ್ರತಿವರ್ಷ ಮಳೆಗಾಲದ ಸಂದರ್ಭದಲ್ಲಿ ನಮಗೆ ಈ ಗೋಳು ಇದ್ದದ್ದೇ. ಇಲ್ಲಿರುವ ರಸ್ತೆಯನ್ನು ತೋಡಿಗಿಂತ ಎತ್ತರಕ್ಕೆ ಕಟ್ಟಿ ಪರಿಹಾರ ಮಾಡಿಕೊಳ್ಳಬಹುದು. ಆದರೆ ಯಾರು ಕೂಡ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿದರು.
ಸ್ಥಳಕ್ಕೆ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್., ನಗರಸಭೆ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ
ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದಾಖಲೆ ಪ್ರಮಾಣದ ಮಳೆ ಬಿದ್ದಿದ್ದು, ಈಗಾಗಲೇ ಈ ಭಾಗದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಉಡುಪಿಯಲ್ಲಿ 24 ಗಂಟೆಯಲ್ಲಿ 210.5 ಮೀ.ಮೀ ಮಳೆ ಬಿದ್ದ ಪರಿಣಾಮ 150ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.
ಕರ್ನಾಟಕದ ಕರಾವಳಿ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 4-5 ದಿನ ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಂಗಳವಾರ (ನಾಳೆ) ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 08.07.2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 09.07.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿಲ್ಲ.
ಮಂಗಳೂರಿನಲ್ಲೂ ಭಾರೀ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಹಲವು ಕಡೆ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನದಿ ತೀರಗಳ ಪ್ರದೇಶಗಳಲ್ಲಿ ನೆರೆ ಭೀತಿ ಕಾಣಿಸಿಕೊಂಡಿದೆ. ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ನಾಳೆ ಆರೆಂಜ್ ಅಲರ್ಟ್ ಮುನ್ನೆಚ್ಚರಿಕೆ ನೀಡಿದೆ.
ವರದಿ: ಶಾರೂಖ್ ತೀರ್ಥಹಳ್ಳಿ

ಮಳೆ ಬಂದ ಕಾರಣ ಅಯೋಧ್ಯೆಯ ರಾಮ ಮಂದಿರದಲ್ಲಿ ನೀರು ಸೋರಿತು : ಪೇಜಾವರ ಶ್ರೀ
ಮಳೆ ಬಂದ ಕಾರಣ ಉಡುಪಿಯಲ್ಲಿ ನೆರೆ ಬಂದಿತು : ಅನಾಮಿಕ
* ಉಡುಪಿಯ ಜನರು ಬಹಳ ಬುದ್ಧಿವಂತರು ! ಅಲ್ಲವೇ…?