ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳ ಮೂಲದ ದಿಯಾ ಮೊಂಡಲ್ (21) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಇದನ್ನು ಓದಿದ್ದೀರಾ? ದಾವಣಗೆರೆ | ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಆತ್ಮಹತ್ಯೆ
ದಿಯಾ ಮೊಂಡಲ್ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿರುವ ಶಂಕೆಯಿದ್ದರೂ ಕೂಡಾ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಆಕೆ ಯಾವುದೇ ಮಾನಸಿಕ ಖಿನ್ನತೆಗೆ ಒಳಗಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.
ಸಹಪಾಠಿಗಳು ಹಾಸ್ಟೆಲ್ ಕೋಣೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿದ್ಯಾರ್ಥಿನಿಯ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ನಡುವೆ ಈ ಪ್ರಕರಣದ ಬಗ್ಗೆ ಅಧಿಕ ತನಿಖೆಯನ್ನು ನಡೆಸುವಂತೆ ವಿದ್ಯಾರ್ಥಿನಿಯ ತಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದ್ದಾರೆ.