ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಔರಾದ ಪಟ್ಟಣದ ಆರೋಗ್ಯ ಇಲಾಖೆ ಕಛೇರಿಯಲ್ಲಿ ಗುರುವಾರ ಡೆಂಗ್ಯೂ ಜ್ವರ ನಿಯಂತ್ರಣ ಕುರಿತಂತೆ ತಾಲೂಕು ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸ್ವಚ್ಛತೆಯ ಕುರಿತಾಗಿ ಅಧಿಕಾರಿಗಳಿಗೆ ತಿಳಿಸಿದರು.
ʼಡೆಂಗ್ಯೂ ರೋಗ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ ಎಲ್ಲಿಯೂ ಸ್ವಚ್ಛತೆ ಕಾಣಿಸುತ್ತಿಲ್ಲ. ಎಲ್ಲ ಗ್ರಾಮಗಳಲ್ಲಿ ಚರಂಡಿಗಳು ತುಂಬಿವೆ. ಎಲ್ಲೆಂದರಲ್ಲಿ ನೀರು ನಿಂತಿರುವುದು ಕಾಣಿಸುತ್ತಿದೆ. ಹೀಗಾದರೆ ಡೆಂಗ್ಯೂ ನಿಯಂತ್ರಣ ಹೇಗೆ ಸಾಧ್ಯʼ ಎಂದು ಪ್ರಶ್ನಿಸಿದರು.
ʼರೋಗ ಲಕ್ಷಣಗಳ ಕಾಣಿಸಿದಲ್ಲಿ ತಕ್ಷಣ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಜ್ವರದ ಲಕ್ಷಣಗಳು, ತಪಾಸಣೆ, ಚಿಕಿತ್ಸೆಯ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸಿದಲ್ಲಿ ರೋಗ ಬಾರದಂತೆ ತಡೆಯಬಹುದು. ಹಾಗಾಗಿ ಜಾಗೃತಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕು. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿರುವ ವೈದ್ಯರು ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡಬೇಕು. ಮನೆ, ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಕೆಲವೆಡೆ ಆಶಾ ಕಾರ್ಯಕರ್ತೆಯರು ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ದೂರುಗಳಿವೆ. ಇವುಗಳನ್ನು ಸರಿಪಡಿಸಬೇಕುʼ ಎಂದು ಹೇಳಿದರು.
ʼಅಸ್ವಚ್ಛತೆಯಿಂದ ಸೊಳ್ಳೆಗಳು ಹೆಚ್ಚಾಗಿ ಡೆಂಗ್ಯೂ ಸೇರಿ ಚಿಕುನಗುನ್ಯಾ, ಮಲೇರಿಯಾದಂತಹ ಹಲವಾರು ರೋಗಗಳು ಹರಡುತ್ತವೆ. ಹಾಗಾಗಿ ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಕೊಡಬೇಕು. ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಚರಂಡಿಗಳನ್ನು ಸ್ವಚ್ಛಗೊಳಿಸಿ, ಬ್ಲೀಚಿಂಗ್ ಪೌಡರ್ ಹಾಕಬೇಕು. ಎಲ್ಲ ಕಡೆಗಳಲ್ಲಿ ಫಾಗಿಂಗ್ ಮಾಡಿಸಬೇಕುʼ ಎಂದು ತಾಲೂಕು ಪಂಚಾಯತ್ ಇಒಗೆ ಸೂಚಿಸಿದರು.
ʼಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಹಾಗಾಗಿ ಪಿಡಿಓಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು, ಕೆಲಸ ಮಾಡಬೇಕು. ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು. ಆರೋಗ್ಯ ಇಲಾಖೆಯ ಸಂಪರ್ಕದಲ್ಲಿದ್ದು, ಗ್ರಾಮ ಪಂಚಾಯಿತಿಯಿಂದ ಮಾಡಬಹುದಾದ ಎಲ್ಲ ರೀತಿಯ ಸಹಕಾರ ಒದಗಿಸಬೇಕುʼ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ಗಾಯತ್ರಿ ಮಾತನಾಡಿ, ʼಡೆಂಗ್ಯೂ ಜ್ವರದ ಲಕ್ಷಣಗಳು, ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಔರಾದ -ಕಮಲನಗರ ತಾಲೂಕು ಕೇಂದ್ರಗಳಿಗೆ ರೋಗ ಪತ್ತೆಗೆ ವ್ಯವಸ್ಥೆ ಮಾಡಲಾಗಿದೆ. ರೋಗ ಲಕ್ಷಣಗಳು ಕಾಣಿಸಿದಲ್ಲಿ ತಕ್ಷಣ ತಪಾಸಣೆ ಮಾಡುವ ಕೆಲಸ ನಡೆದಿದೆ. ಈವರೆಗೆ 22 ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿದ್ದು, ಇಬ್ಬರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಚಿಕಿತ್ಸೆ ನಡೆಯುತ್ತಿದೆ. ರೋಗ ನಿಯಂತ್ರಣಕ್ಕೆ ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆʼ ಎಂದು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
ಸಭೆಯಲ್ಲಿ ಔರಾದ್ ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಕಮಲನಗರ ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ತಾ.ಪಂ.ಇಒ ಬೀರೇಂದ್ರಸಿಗ್ ಠಾಕೂರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುಭಾಷ, ಕಮಲನಗರ ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.