ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರವೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿಯೂ ಮಳೆ ಬೀಳಲಿದೆ ಎಂದು ಇಲಾಖೆ ಹೇಳಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮೂರು ದಿನಗಳ ಕಾಲ (ಜುಲೈ 13, 14, 15) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಇನ್ನು, ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳು ಹಾಗೂ ದಕ್ಷಿಣದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಹೇಳಿದೆ.