ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಹೆದ್ದಾರಿ ಬದಿಯ ಹಲವು ಗುಡ್ಡಗಳು ಕುಸಿದು ಬೀಳುತ್ತಿದ್ದು, ನಾನಾ ಭಾಗಗಳಲ್ಲಿ ಸಂಚಾರ ಬಂದ್ ಆಗಿದೆ. ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತವಾಗಿವೆ. ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸಿವೆ. ಪ್ರಮುಖ ಪಟ್ಟಣಗಳಿಗೆ ಸಂಪರ್ಕ ಒದಗಿಸುವ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವ್ಯಾಪಾರ-ವಹಿವಾಟು, ಪ್ರವಾಸಗಳು ಮೊಟಕುಗೊಂಡಿವೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶಿರೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದ್ದು, ಭಟ್ಕಳ-ಬೈಂದೂರು ನಡುವಿನ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳಿಲ್ಲ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಗಿಹೊಸಳ್ಳಿ ಬಳಿ ಕೂಡ ರಾಷ್ಟ್ರೀಯ ಹೆದ್ದಾರಿ 766(ಇ)ರಲ್ಲಿ ಗುಡ್ಡು ಕುಸಿದಿದ್ದು, ಸಿರಸಿ ಮತ್ತು ಕುಮಟಾ ನಡುವಿನ ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು ಸಿದ್ದಾಪುರ ಮಾರ್ಗವಾಗಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರಮುಖ ಪ್ರವಾಸಿ ತಾಣವಾದ ಯಾಣಕ್ಕೂ ಕೂಡ ಸಂಪರ್ಕ ಕಡಿತವಾಗಿದ್ದು, ಪ್ರವಾಸಿಗರ ಕುಮಟಾದಿಂದ ಮಾತ್ರವೇ ಯಾಣಕ್ಕೆ ತೆರಳುವಂತಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಯೂ ನಡೆಯುತ್ತಿದ್ದು, ಶಿರಾಡಿ ಘಾಟ್‌ನ ಪರಿಸ್ಥಿತಿ ಅಸ್ಥವ್ಯಸ್ಥವಾಗಿದೆ. ಶಿರಾಡಿ ಘಾಟ್‌ನಲ್ಲಿ ಸಂಚಾರ ಬಹುತೇಕ ಕಡಿತಗೊಂಡಿದೆ. ಜೊತೆಗೆ, ಸಂಪಾಜೆ ಬಳಿಯ ಘಾಟ್‌ನಲ್ಲಿಯೂ ಭೂಕುಸಿತ ಸಂಭವಿಸಿದೆ. ಬೆಂಗಳೂರು-ಮಂಗಳೂರು ನಡುವಿನ ಸಂಚಾರಕ್ಕೆ ಚಾರ್ಮಾಡಿ ಘಾಟ್ ಮಾರ್ಗವನ್ನಷ್ಟೇ ಬಳಸಬೇಕಾಗಿದೆ.
ಇನ್ನು, ಮೈಸೂರು ಜಿಲ್ಲೆಯಲ್ಲಿ ಕಬಿನಿ ನದಿ ಉಕ್ಕಿ ಹರಿಯುತ್ತಿದ್ದು, ಕಬಿನಿ ಜಲಾಶಯವೂ ಬಹುತೇಕ ತುಂಬಿದೆ. ಪರಿಣಾಮ, ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಮೈಸೂರಿನಿಂದ ತಮಿಳುನಾಡು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ಜಲಾವೃತಗೊಂಡಿದೆ. ಪರಿಣಾಮ, ವಾಹನ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರಿನಿಂದ ಎರಡೂ ರಾಜ್ಯಗಳಿಗೆ ಸಂಪರ್ಕ ಕಡಿತಗೊಂಡಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಹೊರನಾಡು ನಡುವಿನ ರಸ್ತೆ, ಕಳಸ-ಹೊರನಾಡು ರಸ್ತೆ, ಶೃಂಗೇರಿ-ಕೊಪ್ಪ ರಸ್ತೆಗಳು ಅಲ್ಲಲ್ಲಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಶೃಂಗೇರಿಯಿಂದ ಹೊರನಾಡಿಗೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ.