ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ನೀಡಿದ್ದು, ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ, ಈಗ ಬಹಿರಂಗಗೊಂಡಿದೆ. ಬಿಜೆಪಿ ಸೋಲಿಗೆ ಯೋಗಿ ತಲೆದಂಡಕ್ಕೆ ಪ್ರಯತ್ನಗಳು ನಡೆಯುತ್ತಿವೆ ಎಂದು ಚರ್ಚೆಯೂ ಆಗುತ್ತಿದೆ.
ಈಗಾಗಲೇ ಮೌರ್ಯ ಮತ್ತು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಬಿಜೆಪಿಯ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಚೌಧರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೆ, ಮೌರ್ಯ ಅವರು ಅಧಿಕಾರಕ್ಕಿಂತ ಪಕ್ಷದ ಸಂಘಟನೆ ಮುಖ್ಯವೆಂದು ಹೇಳಿದ್ದಾರೆ. ಆ ಮೂಲಕ ಯೋಗಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ನಡುವೆ ಈಗ, ಯೋಗಿ ಆದಿತ್ಯಾನಾಥ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.
ಜುಲೈ 27ರಂದು ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಅದಕ್ಕೂ ಮೊದಲು ಅಥವಾ ನಂತರದಲ್ಲಿ ಮೋದಿ ಮತ್ತು ಬಿಜೆಪಿ ಇತರ ನಾಯಕರನ್ನು ಯೋಗಿ ಭೇಟಿ ಮಾಡುವ ಸಾಧ್ಯತೆ ಇದೆ.
ಜುಲೈ 29ರಿಂದ ಉತ್ತರ ಪ್ರದೇಶ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನ ಯೋಗಿ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆಗಳ ಬಗ್ಗೆ ಯೋಗಿ ಮಾತುಕತೆ ನಡೆಸಬಹುದು ಎನ್ನಲಾಗಿದೆ. ಯೋಗಿ ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಯಾಕೆಂದರೆ, ಇತ್ತೀಚೆಗೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಉಪಮುಖ್ಯಮಂತ್ರಿ ಮೌರ್ಯ ಅವರು ಬಿಜೆಪಿ ಸೋಲಿಗೆ ಯೋಗಿ ಅವರನ್ನು ಹೊಣೆಗಾರರನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಯೋಗಿ ಅವರು ಪಕ್ಷ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದರು.