ತಮಿಳುನಾಡು ಬಿಎಸ್ಪಿ ರಾಜ್ಯಾಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಂಧಿತರನ್ನು ಎನ್ ವಿಜಯಕುಮಾರ್ (21), ವಿ ಮುಕಿಲನ್ (32) ಮತ್ತು ಎನ್ ವಿಘ್ನೇಶ್ (27) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮೂವರ ಬಂಧನದ ಬಳಿಕ ಬಿಎಸ್ಪಿ ಮುಖ್ಯಸ್ಥರ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆಯು 20ಕ್ಕೆ ಏರಿಕೆಯಾಗಿದೆ. ಈಗಾಗಲೇ ಜುಲೈ 14ರಂದು ಪ್ರಕರಣದ ಆರೋಪಿ ಕೆ ತಿರುವೆಂಗಡಂ ಅನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ.
ತಿರುವೆಂಗಡಂ ಬಂಧನದ ಬಳಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ತನಿಖೆಯ ಭಾಗವಾಗಿ ನಗರದ ಒಂದು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ತಮಿಳುನಾಡು ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ ಆರೋಪಿ ಎನ್ಕೌಂಟರ್ಗೆ ಬಲಿ
ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದು ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 5ರಂದು, ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ಸ್ಟ್ರಾಂಗ್ ಅವರನ್ನು ತಂಡವೊಂದು ಕೊಚ್ಚಿ ಕೊಲೆ ಮಾಡಿದ್ದು ಈ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿವೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಬಿಎಸ್ಪಿ ನಾಯಕಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು.