ಶೈಕ್ಷಣಿಕ ವರ್ಷ ಆರಂಭವಾದ ಕೂಡಲೇ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ಸಂಘಟನೆಯಿಂದ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಯುವರಾಜ್ ಓಲೇಕಾರ್ ಮಾತನಾಡಿ, “ಸರ್ಕಾರವು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ” ಎಂದು ಹೇಳಿದರು.
ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮತ್ತು ಈ ಸಮುದಾಯಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುದಾನವನ್ನು ಮೀಸಲಿಟ್ಟಿದೆ. ಆದರೆ ಈ ಅನುದಾನ ಈ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಕೇಳಿದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಚೇರಿಗೆ ಅಲೆದಾಡಿ ಪಾಲಕರು ಮತ್ತು ವಿದ್ಯಾರ್ಥಿಗಳ ಚಪ್ಪಲಿಗಳು ಸವೆದಿವೆಯೇ ಹೊರತು ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.
“ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.25ರ ಅನುದಾನದಲ್ಲಿ ಪಠ್ಯಪುಸ್ತಕ ವಿತರಣೆ ಮಾಡುವ ಯೋಜನೆ ಇದ್ದು, ಈ ಯೋಜನೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನ ಮಾಡದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಲು ಇದೂ ಒಂದು ಕಾರಣವಾಗಿದೆ” ಎಂದರು.
“ಪಠ್ಯಪುಸ್ತಕವನ್ನು ಕೇಳಲು ಹೋದ ವಿದ್ಯಾರ್ಥಿಗಳಿಗೆ ಸಿಂದಗಿ ತಾಲೂಕಿನ ಬಂದಾಳ ಗ್ರಾಮ ಪಂಚಾಯತಿಯ ಅಧಿಕಾರಿಗಳು ಉಡಾಫೆ ಉತ್ತರವನ್ನು ನೀಡಿ ವಿದ್ಯಾರ್ಥಿಗಳನ್ನು ಅಲೆದಾಡಿಸುತ್ತಿದ್ದಾರೆ. ಹಾಗಾಗಿ ಮೇಲಾಧಿಕಾರಿಗಳಾದ ತಾವು ತಪ್ಪಿತಸ್ಥ ಅಧಿಕಾರಿಗಳ ಮೇಲೇಯೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸಂಶಿ ಗ್ರಾ.ಪಂ. ಪಿಡಿಓ ಅಮಾನತ್ತಿಗೆ ಸಚಿವ ಸಂತೋಷ್ ಲಾಡ್ ಆದೇಶ
ಪ್ರತಿ ವರ್ಷ ಶೈಕ್ಷಣಿಕ ವರ್ಷ ಆರಂಭವಾದ ಜೂನ್ ಜುಲೈ ತಿಂಗಳುಗಳಲ್ಲಿ ಸಿಂದಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಕರೆಯಬೇಕು. ಈ ಕುರಿತು ಕಡ್ಡಾಯವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸೂಚನಾ ಫಲಕ ಹೊರಡಿಸಬೇಕು. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಅಥವಾ ಪಠ್ಯಪುಸ್ತಕ ವಿತರಣೆಯನ್ನು ನೀಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಸಾವಿರಾರು ವಿದ್ಯಾರ್ಥಿಗಳೊಂದಿಗೆ ತಾಲೂಕು ಪಂಚಾಯತ್‌ಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಲೋಕೇಶ್ ಚಲವಾದಿ, ಆಕಾಶ ಹೊಸಮನಿ, ಪ್ರೇಮ್ ಕುಮಾರ್ ಹೊಸಮನಿ, ಚೇತನ್, ಸುದೀಪ್ ಪೂಜಾರಿ, ಭೀಮು, ಕಾಶಿನಾಥ್ ಸೇರಿದಂತೆ ಇತರರು ಇದ್ದರು.
