ತಾಯಿಯ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿದ್ದ ಮಕ್ಕಳಿಬ್ಬರು ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಶಿಡ್ಲಘಟ್ಟ ನಗರದ ಪ್ರೇಮ ನಗರದ ನಿವಾಸಿಗಳಾದ ಲಲಿತಮ್ಮ ಎಂಬುವವರ ಪುತ್ರಿ ನವ್ಯಾ(24) ಹಾಗೂ ಮಗ ಪ್ರಭು(22) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.
ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಇತ್ತೀಚೆಗಷ್ಟೇ ನವ್ಯಾ, ಪ್ರಭು ಅವರ ತಾಯಿ ಲಲಿತಮ್ಮ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕವಾಗಿ ಕುಗ್ಗಿದ್ದ ಇಬ್ಬರೂ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
