ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ 2023ರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ರಚನೆಯಾಗಿದ್ದು, ಆದರೆ ಇಲ್ಲಿಯವರೆಗೂ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ, ಅನುದಾನ ಸಹ ಬಿಡುಗಡೆ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.’
ರಾಜ್ಯದಲ್ಲಿ ಕುಂಬಾರರು ಹಿಂದುಳಿದ ಸಮುದಾಯಕ್ಕೆ ಸೇರಿದವರು ಎಂಬ ಹಣೆಪಟ್ಟೆ ಮಾತ್ರ ಇದೆ. ಆದರೆ ಸರ್ಕಾರ ಹಿಂದುಳಿದ ವರ್ಗದವರಿಗೆ ನೀಡುವ ಸೌಲಭ್ಯಗಳಿಂದ ನಮ್ಮ ಸಮುದಾಯ ವಂಚಿತವಾಗುತ್ತಿದೆ. ಕಾರಣ ನಾವು ಕರ್ನಾಟಕದಲ್ಲಿ ಹಿಂದುಳಿದ ವರ್ಗದವರಲ್ಲಿ ಅತೀ ಹಿಂದುಳಿದ ಸಮುದಾಯದವರಾಗಿದ್ದೇವೆ. ಹೀಗಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದೇವೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ನಮ್ಮನ್ನು ಒಳಗೊಂಡಂತೆ ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಅನೇಕ ಬಾರಿ ಕುಂಬಾರರು ಪ್ರತಿಭಟನೆಯನ್ನು ಮಾಡಿದ್ದೇವೆ. ನಿವೇದನೆ ಪತ್ರವನ್ನು ಮುಖ್ಯಮಂತ್ರಿಗಳಿಗೂ ಸೇರಿ ಸಂಬಂಧಿಸಿದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಸರ್ಕಾರ ಮಾತ್ರ ಇಲ್ಲಿಯವರೆಗೂ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಅಹಿಂದ ನಾಯಕರೆಂದೇ ಕರೆಸಿಕೊಳ್ಳುವ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಕುಂಬಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಕೂಡಲೇ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ, ಸೂಕ್ತ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಂಬಾರ ಸಮುದಾಯದ ಪ್ರಮುಖರಾದ ಪ್ರಭು ಕುಂಬಾರ್ ಬೆಣ್ಣೂರ್, ಶರಣು ಕುಂಬಾರ್ ಅಫಜಲಪುರ, ಶರಣಪ್ಪ ಕುಂಬಾರ್ ಗಡಿಕೇಶ್ವಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು