ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ದೈವಿಗಳು.
ವಾಣಿ ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿಯಾಗಿದ್ದು, ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ರಮೇಶ್ ಸಿಬ್ಬಂದಿಗಳೊಂದಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದ್ದು ಮರಣೋತ್ತರ ಪರೀಕ್ಷೆಗೆ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಹೊಸನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
