ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ; ಜನಾಂದೋಲನ ಸಭೆಯಲ್ಲಿ ಸಿಎಂ ಆಕ್ರೋಶ

Date:

Advertisements

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.

“ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ .ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಹರಿಹಾಯ್ದರು.

Advertisements

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದು ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ” ಎಂದರು.

ನಾನು ಜಗ್ಗಲ್ಲ, ಬಗ್ಗಲ್ಲ: ಸಿದ್ದರಾಮಯ್ಯ

“ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಹೀಗಾಗಿ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ನಾಚಿಕೆ ಆಗಲ್ವಾ?

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ” ಎಂದು ಪ್ರಶ್ನಿಸಿದರು.

“ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ” ಎಂದು ಕಿಡಿಕಾರಿದರು.

“ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ” ಎಂದು ಸವಾಲು ಹಾಕಿದರು.

“ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X