ಕನ್ನಡ ಭಾಷೆ ಉಳಿಸಿ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ಮೇಲಿದ್ದು, ಬರೀ ಸರ್ಕಾರಿ ಆದೇಶ ಎನ್ನುವ ಕಾರಣಕ್ಕೆ ಕನ್ನಡ ಬಳಸದೆ ಕನ್ನಡ ನಮ್ಮ ಭಾಷೆ ಎಂದು ಅನುಷ್ಠಾನಕ್ಕೆ ತರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ʼಸರ್ಕಾರಿ ಸೌಲಭ್ಯ ಪಡೆಯಲು ಜನರು ಸರ್ಕಾರಿ ಕಚೇರಿಗೆ ಬರುತ್ತಾರೆ. ಅವರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಎಲ್ಲ ಕಚೇರಿಗಳಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನಕ್ಕೆ ತರಬೇಕುʼ ಎಂದರು.
ʼಕಚೇರಿ ನಾಮಫಲಕ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. 1971 ರಿಂದ ಅವಲೋಕಿಸಿದಾಗ ಹಿಂದಿ ಭಾಷೆ ಇಲ್ಲಿಯವರೆಗೆ ಶೇ.60ರಷ್ಟು ಬೆಳೆದಿದೆ. ಅದರೆ ಕನ್ನಡ ಭಾಷೆ ಬಳಕೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದು ಹೀಗೆ ಮುಂದುವರೆದರೆ ಮುಂದಿನ ಮೂರ್ನಾಲ್ಕು ದಶಕಗಳಲ್ಲಿ ಕನ್ನಡ ಭಾಷೆ ಎಲ್ಲಿದೆ ಅಂತ ಹುಡುಕಬೇಕಾಗುತ್ತದೆʼ ಎಂದು ಆತಂಕ ವ್ಯಕ್ತಪಡಿಸಿದರು.
ʼರಾಯಚೂರಿನಲ್ಲಿ ಇದೇ ಅಕ್ಟೋಬರ್ 5ರಂದು ಗೋಕಾಕ್ ಚಳುವಳಿ ಕುರಿತು ಹೊಸ ಜನಾಂಗಕ್ಕೆ ಪರಿಚಯಿಸುವ ಕುರಿತು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಭಾಗಿಯಾಗುತ್ತಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದಿಂದ ನೀಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದುʼ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ನಿತೀಶ್ ಕೆ. ಮಾತನಾಡಿ, ʼಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕಾಗಿ ಯಾವುದೇ ರೀತಿಯ ಹಿಂಜರಿಕೆ ಬೇಡ, ಅದನ್ನು ಹೃದಯದಿಂದ ಜಿಲ್ಲಾಡಳಿತ ಕನ್ನಡ ಅನುಷ್ಠಾನಗೊಳಿಸಲು ಸೂಕ್ತ ಕ್ರಮಕೈಗೊಳ್ಳುತ್ತದೆ. ಕನ್ನಡ ಅನುಷ್ಠಾನ ವಿಚಾರದಲ್ಲಿ ರಾಜ್ಯಕ್ಕೆ ಮಾದರಿ ಜಿಲ್ಲೆಯಾಗಿ ಹೊರಹೊಮ್ಮುವ ವಿಶ್ವಾಸವಿದೆ. ಜಿಲ್ಲೆಯಲ್ಲಿ ಎಲ್ಲ ಸರ್ಕಾರಿ ಕಚೇರಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತದೆʼ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನಡಿಗರಿಗೆ ಉದ್ಯೋಗ, ಸರ್ಕಾರಿ ಶಾಲೆಗಳ ಸಬಲೀಕರಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಕನ್ನಡ ಪರ ಸಂಘಟನೆಗಳ ಸದಸ್ಯರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು
ಸಭೆಯಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಜಿಲ್ಲಾ ಕೈಗಾರಿಕೆ ಅಧಿಕಾರಿ ಬಸವರಾಜ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಂಗಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಳಪ್ಪ ಬಡಿಗೇರ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.