ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗಾಗಿ ಸರಕಾರದಿಂದ 15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳ ಪಟ್ಟಿ ಕೊಡಿ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ ಅವರಿಗೆ ಶಾಸಕ ಕೊತ್ತೂರು ಮಂಜುನಾಥ್ ಸೂಚಿಸಿದರು.
ನಗರದ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿನ ಮುಖ್ಯರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ರಸ್ತೆಗಳ ದುರಸ್ತಿ ಕಾರ್ಯ ಆರಂಭಿಸಬೇಕಿದೆ. ಕೂಡಲೇ ಕ್ರಿಯಾ ಯೋಜನೆ ರೂಪಿಸಿ. ಬಾಕಿ ಉಳಿದಿರುವ ರಸ್ತೆಗಳನ್ನು ಹಂತಹಂತವಾಗಿ ಪೂರ್ಣಗೊಳಿಸಿ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ರಸ್ತೆಗಳ ಅಭಿವೃದ್ಧಿಗೆ ಗುದ್ದಲಿಪೂಜೆಗೆ ಬರಲಿದ್ದಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯಾಗಿಲ್ಲದ ಮತ್ತು ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಗಳ ಬಗ್ಗೆ ಮಾಹಿತಿ ಕೊಡಿ, ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದೇನೆ. ಕ್ಷೇತ್ರದ ಅಭಿವೃದ್ದಿಗಾಗಿ ಬದ್ಧನಾಗಿರುತ್ತೇನೆ ಎಂದು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಕೋಲಾರ | ಹಾಸ್ಟೆಲ್ ವಾರ್ಡನ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತರಾಟೆ
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಇಇ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಖಾದ್ರಿಪುರ ಬಾಬು, ಚಂಜಿಮಲೆ ಮುನೇಶ್, ಮೋಹನ್ ಸೇರಿದಂತೆ ಅಧಿಕಾರಿ ವರ್ಗದವರು ಇದ್ದರು.