ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಶನಿವಾರ ದೇಶಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆಗಳು ನಡೆದಿದೆ. ಇಂತಹ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೋರಮಂಗಲದ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ, ಅಪಘಾತಕ್ಕೀಡಾಗಿದ್ದರು. ಬಳಿಕ, ತನ್ನ ಬೈಕ್‌ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಆಟೋ ಹತ್ತಿದ್ದರು. ಈ ವೇಳೆ, ಆಟೋ ಚಾಲಕ ಆಕೆಯನ್ನು ಆಕೆಯ ಮನೆಗೆ ತಲುಪಿಸದೆ, ಎಚ್‌ಎಸ್‌ಆರ್ ಲೇಔಟ್‌ಗೆ ಕರೆದೊಯ್ದಿದ್ದಾನೆ. ಅಲ್ಲಿ, ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಸ್ವಸ್ಥಗೊಂಡಿದ್ದ ಯುವತಿಯನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಠಾಣೆಗೆ ಭೇಟಿ ನೀಡಿದ್ದ ಎಚ್‌ಎಸ್‌ಆರ್ ಲೇಔಟ್ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ಆಕೆಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ವಿವರಿಸಿರುವ ಸ್ಥಳಗಳಿಗೆ ತೆರಳಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಘಟನೆಯ ಬಳಿಕ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿಯೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಅತ್ಯಾಚಾರ ಕೃತ್ಯಗಳ ವಿರುದ್ಧ ಧರಣಿ, ಹೋರಾಟಗಳು ನಡೆಯುತ್ತಿವೆ.