ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಬೀದರ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ʼರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೇಂದ್ರ ಸರ್ಕಾರದ ಅಣತಿಯಂತೆ ರಾಜಭವನ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯನವರ ಏಳಿಗೆ ಹತ್ತಿಕ್ಕಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ರೂಪಿಸುತ್ತಿದೆʼ ಎಂದು ಕಿಡಿಕಾರಿದರು.
ಮಾಜಿ ಎಂಎಲ್ಸಿ ಅರವಿಂದಕುಮಾರ್ ಅರಳಿ ಮಾತನಾಡಿ, ʼಈ ಹಿಂದೆ ಕೇಂದ್ರ ಸಚಿವರಾಗಿ ಉತ್ತಮ ಆಡಳಿತ ನೀಡಿದ ರಾಜ್ಯಪಾಲ ಥಾವರ್ ಚಂದ್ ಅವರು ಈಗ ಕರ್ನಾಟಕ ರಾಜ್ಯಪಾಲರಾದ ಬಳಿಕ ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಲು ರಾಜ್ಯಪಾಲರಿಗೆ ಸೂಚಿಸಬೇಕು ಹಾಗೂ ಅವರನ್ನು ವಾಪಸ್ ಕರೆಸಿಕೊಳ್ಳಬೇಕುʼ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಾಗರಿಕ ಸಮಾಜ
ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ, ಮಾಜಿ ಸಂಸದ ನರಸಿಂಗ್‌ರಾವ್ ಸೂರ್ಯವಂಶಿ, ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಾಜಿ ಎಂಎಲ್ಸಿ ಕೆ.ಪುಂಡಲಿಕರಾವ್ ಮುಖಂಡರಾದ ಸಂಜಯ ಜಾಗಿರದಾರ್, ವಿನೋದ್ ಅಪ್ಪೆ, ಮಹಮ್ಮದ್ ರಿಯಾಜ್, ಚಂದ್ರಶೇಖರ ಚನ್ನಶೆಟ್ಟಿ, ಹಣಮಂತ ಮಲ್ಕಾಪುರೆ, ಇಮ್ರಾನ್ ಖಾನ್, ಆನಂದ ಚಹ್ವಾಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.