ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಇದಕ್ಕೂ ಮೊದಲು ಕೌಶಲ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಸಚಿವ ಎನ್ ಎಸ್ ಬೋಸರಾಜು ನೇತೃತ್ವದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತದಿಂದ ಕೇಂದ್ರ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗವನ್ನು ಬಂದ್ ಮಾಡಿ ಟಿಪ್ಪುಸುಲ್ತಾನ್ ಉದ್ಯಾನದ ಪಕ್ಕದ ಗಾಲಿಬ್ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅನುಮತಿ ನೀಡಿದ್ದರಿಂದ ಕೆಲಕಾಲ ಸಂಚಾರಕ್ಕೆ ವ್ಯತ್ಯಯವಾಯಿತು.
ಗ್ಯಾರಂಟಿ ಗಳನ್ನು ಸಹಿಸದ ಕೇಂದ್ರ ಸರ್ಕಾರ: ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ಎನ್ ಎಸ್ ಬೋಸರಾಜು, ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು 5 ಗ್ಯಾರಂಟಿಗಳ ಮೂಲಕ ರಾಜ್ಯದ ಬಡ,ಮಧ್ಯಮ ವರ್ಗದ ಪರ ಆಡಳಿತ ನಡೆಸುತ್ತಿದೆ ಇದನ್ನು ಸಹಿಸದ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆವೆಂದು ದೂರಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ. ವಸಂತ ಕುಮಾರ, ಶರಣೇಗೌಡ ಬಯ್ಯಾಪೂರು, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ರುಡಾ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಮಹಮ್ಮದ್ ಶಾಲಂ, ಯುಸೂಫ್ ಖಾನ್, ರಾಣಿ ರಿಚರ್ಡ್, ಮಂಜುಳಾ, ನಾಗವೇಣಿ ಪಾಟಿಲ, ಅಸ್ಲಂ ಪಾಶ, ರಸೂಲ್ ಸಾಬ್, ಮಾಲಾ ಭಜಂತ್ರಿ, ಖಾಜಾಬಿ ಪಾಲ್ಗೊಂಡಿದ್ದರು.
