ಸಮ ಸಮಾಜದ ಹರಿಕಾರ ಡಿ ದೇವರಾಜ ಅರಸು ಅವರು ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದರು. ರಾಜ್ಯದ ಮಟ್ಟಿಗೆ ʼಮೌನ ಕ್ರಾಂತಿಯ ಹರಿಕಾರʼರೆಂದರೆ ಅದುವೇ ಅರಸು ಎಂದು ಕೊಡಗಿನ ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಪರಿವರ್ತನೆಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಮೈಸೂರು ರಾಜ್ಯವನ್ನು ಕರ್ನಾಟಕವಾಗಿಸಿದ ʼಕರ್ನಾಟಕʼ ಏಕೀಕರಣದ ಕರ್ತೃ ಅರಸು. ಬಡವರ ಮತ್ತು ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದವರು, ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು” ಎಂದು ಸಭೆಯಲ್ಲಿ ನುಡಿದರು.
ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಿ ಮಾತನಾಡಿ, “ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗಗಳ ಹರಿಕಾರರಾಗಿ ರಾಜ್ಯದಲ್ಲಿ ಪರಿವರ್ತನೆಯತ್ತ ಹೆಜ್ಜೆ ಹಾಕಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕೆಂಬುದು ಅರಸು ಅವರಿಗೆ ಇಚ್ಛಾಶಕ್ತಿ ಹಾಗೂ ಬದ್ಧತೆಯಾಗಿತ್ತು. ಹಾವನೂರು ಆಯೋಗ ರಚಿಸುವ ಮೂಲಕ ಎಲ್ಲ ವರ್ಗಗಳಿಗೂ ಮೀಸಲಾತಿ ತಂದರು” ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಮಾಜಿ ಅಧ್ಯಕ್ಷ ರಮೇಶ್ ಮಾತನಾಡಿ, “ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಡವರ್ಗದವರಿಗೆ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಅವರ ದೂರದೃಷ್ಟಿ ಹಾಗೂ ದಾರ್ಶನಿಕತ್ವದಿಂದ ಇಂದು ಹಲವರು ಇತರರಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಡಿ ದೇವರಾಜ ಅರಸು ಚಿಂತನೆ, ಆದರ್ಶವನ್ನು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕುಮಾರ
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಹೊನ್ನೇಗೌಡ, ಮೇದಪ್ಪ, ಕೆ ಟಿ ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ ಸೇರಿದಂತೆ ಹಲವರು ಇದ್ದರು.