- ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ
- ಕಳೆದ ವರ್ಷ 3 ರಾಜ್ಯಗಳಿಗೆ ಅನ್ವಯವಾಗುವಂತೆ ಹೊರಡಿಸಿದ್ದ ಆದೇಶ
ಯಾವುದೇ ಒಂದು ಧರ್ಮದ ವಿರುದ್ಧ ದ್ವೇಷ ಭಾಷಣ ಮಾಡುವ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳುವಂತೆ ದೇಶದ ಎಲ್ಲ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಸೂಚಿನೆ ನೀಡಿದೆ.
ದೇಶದ ಹಲವು ಭಾಗಗಳಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಇದುವರೆಗೆ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ನ್ಯಾ. ಕೆ.ಎಂ ಜೋಸೆಫ್ ಮತ್ತು ಬಿ.ವಿ ನಾಗರತ್ನ ಅವರಿದ್ದ ದ್ವಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ.
“ದ್ವೇಷ ಭಾಷಣ ಮಾಡುವ ಯಾವುದೇ ವ್ಯಕ್ತಿಯ ವಿರುದ್ಧ ಯವುದೇ ದೂರುಗಳು ಬರದಿದ್ದರೂ ಕೂಡ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು” ಎಂದು ತಾಖೀತು ಮಾಡಿದೆ.
“ಒಂದು ವೇಳೆ ದ್ಷೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಹೋದರೆ, ಅದನ್ನು ನ್ಯಾಯಾಂಗ ನಿಂದನೆಯೆಂದು ಪರಿಗಣಿಸಲಾಗುತ್ತದೆ” ಎಂದು ಎಚ್ಚರಿಕೆಯನ್ನು ಸಹ ನೀಡಿದೆ.
ಈ ಸುದ್ದಿ ಓದಿದ್ದೀರಾ? : ಬಿಡುವಿಲ್ಲದ ಪ್ರಚಾರ; ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ
“ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಪರಿಗಣಿಸಬೇಕು. ಇಂತಹ ಪ್ರಕರಣಗಳು ದೇಶದ ಜಾತ್ಯಾತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್, ವಿಚಾರಣೆಯನ್ನು ಮೇ 12ಕ್ಕೆ ಮುಂದೂಡಿದೆ.
ದ್ವೇಷ ಭಾಷಣ ಪ್ರಕರಣಗಳಲ್ಲಿ ಪ್ರಥಮ ಮಾಹಿತಿ ವರದಿಗಳ (ಎಫ್‌ಐಆರ್) ಸ್ವಯಂಚಾಲಿತ ನೋಂದಣಿಗೆ ಸಂಬಂಧಿಸಿದಂತೆ 2022ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಈಗ ಈ ನಿಯಮವನ್ನು ವಿಸ್ತರಿಸಿದ್ದು, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.