ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಸೆಪ್ಟೆಂಬರ್ 15ರಂದು ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಮಹದೇವಪ್ಪ ಸಭೆಯಲ್ಲಿ ತಿಳಿಸಿದರು.
“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ” ಎಂದರು.
“ಸೆಪ್ಟೆಂಬರ್ 15ರ ಆ ದಿನ ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು” ಎಂದು ಹೇಳಿದರು.
“ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ಸಚಿವರು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.