ಜೇವರ್ಗಿ ಮೂರಾರ್ಜಿ ದೆಸಾಯಿ ವಸತಿಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ʼದೈಹಿಕ ಶಿಕ್ಷಣʼ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದರೂ ಶಾಲಾ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೆಪಿಆರ್‌ಎಸ್ ಆರೋಪಿಸಿದೆ.
ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಆಡಳಿತದ ಎದುರು ಕೆಪಿಆರ್‌ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕಲಬುರಗಿ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಮಾತನಾಡಿ, “ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಕ್ಕೆ ಒಳಗಾಗಿದ್ದು, 15ನೇ ದಿನವಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಾಂಶುಪಾಲ ಶಿವಪುತ್ರ ಎಂಬುವವರಿಗೆ ದೂರು ನೀಡಿದ್ದಾರೆ. ಆದರೂ ಆರೋಪಿ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!
“ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಈ ಕುರಿತು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.